ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಇಂದು ರಾಜ್ಯಾದ್ಯಂತ ಗುಡುಗು ಮತ್ತು ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 5ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕಳೆದ 24 ಗಂಟೆಗಳಲ್ಲಿ ಉಡುಪಿಯ ಸಿದ್ದಾಪುರ ಹಾಗೂ ಕಾರವಾರ ಭಾಗದಲ್ಲಿ ಗರಿಷ್ಠ 12 ಸೆಂಟಿಮೀಟರ್ನಷ್ಟು ಮಳೆ ದಾಖಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29°C ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಉತ್ತರ ಒಳನಾಡಿನ ಭಾಗಗಳಾದ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಗುಡುಗು ಸಹಿತ ಮಳೆಯಾಗಲಿದೆ. ಮೈಸೂರು, ಚಾಮರಾಜನಗರ ಮತ್ತು ಹಾಸನ ಭಾಗಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಕರಾವಳಿ ತೀರದಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ
ಸಾಧ್ಯತೆ ಇರುವುದರಿಂದ, ಜುಲೈ 4 ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ತೀವ್ರ ಜಾಗ್ರತೆ ವಹಿಸಲು ಸೂಚಿಸಲಾಗಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಈ ಜಿಲ್ಲೆಗಳೀಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಾರ್ವಜನಿಕರು ನದಿ, ಜಲಪಾತಗಳ ಬಳಿ ಹೋಗದಂತೆ ಮತ್ತು ಹಳೆಯ ಮರಗಳು ಹಾಗೂ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಸಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ಭಾರಿ ಮಳೆಯಾಗಲಿದ್ದರೆ, ಬಾಗಲಕೋಟೆ, ಬಿದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನದಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಮೈಸೂರು, ಕೋಲಾರ, ಮಂಡ್ಯ, ಕೊಡಗು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.








