ಸಮಗ್ರ ನ್ಯೂಸ್: ರಾಜ್ಯ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವಜನತೆಗೆ ಇಲ್ಲೊಂದು ಭರವಸೆಯ ಸುದ್ದಿ ಇದೆ. ಮುಂಬರುವ ಮೂರು ತಿಂಗಳ ಅವಧಿಯಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬರೋಬ್ಬರಿ 57 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಸ್ಥಳೀಯ ವೃಂದದ 15 ಸಾವಿರ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಸೇರಿದಂತೆ ಒಟ್ಟು 57 ಸಾವಿರ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗುವುದು ಎಂದರು. ಕಂದಾಯ, ಕೃಷಿ, ಗೃಹ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸೇರಿದಂತೆ ಸರ್ಕಾರದ ಎಲ್ಲ ಪ್ರಮುಖ ಇಲಾಖೆಗಳಿಂದಲೂ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಹೊರಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು. ಇದೇ ವೇಳೆ, ಎನ್ಡಿಆರ್‌ಎಫ್ ಮತ್ತು ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿಗೆ ಅನುಗುಣವಾಗಿ ರೈತರ ಬೆಳೆ ಸಾಲ ಮನ್ನಾ ಮಾಡುವ ಕುರಿತು ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ಅವರು ಭರವಸೆ ನೀಡಿದರು.
ರಾಜ್ಯದ ಪ್ರಸ್ತುತ ಹವಾಮಾನ ವೈಪರೀತ್ಯ ಹಾಗೂ ಮಳೆ ಕೊರತೆಯ ವಾಸ್ತವ ಸ್ಥಿತಿಯನ್ನು ಅರಿತುಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಬೀದರ್ ಜಿಲ್ಲೆಯ ಬಸವಕಲ್ಯಾಣದಿಂದ ತಾವೇ ಖುದ್ದಾಗಿ ಬರ ಅಧ್ಯಯನ ಪ್ರವಾಸವನ್ನು ಆರಂಭಿಸಿರುವುದಾಗಿ ಶಿವಕುಮಾರ್ ತಿಳಿಸಿದರು. ಕಲ್ಯಾಣ ಕರ್ನಾಟಕದ ಒಟ್ಟು 37 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕಿತ್ತೂರು ಕರ್ನಾಟಕದ ಬೆಳಗಾವಿ ಮತ್ತು ಹುಬ್ಬಳ್ಳಿಗೂ ಮುಂಬರುವ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದೇನೆ ಎಂದು ಅವರು ಹೇಳಿದರು.








