ಸಮಗ್ರ ನ್ಯೂಸ್: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ತನ್ನ ಆದೇಶವನ್ನು ಕಾಯ್ದಿರಿಸಿದೆ. ಸಿಬಿಐ ತನಿಖೆಯ ವೈಫಲ್ಯವನ್ನು ತೀವ್ರವಾಗಿ ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿದೆ.
ಭಾರಿ ಚರ್ಚೆಗೆ ಗ್ರಾಸವಾಗಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾ*ರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಪೂರ್ಣಗೊಂಡಿದ್ದು, ನ್ಯಾಯಪೀಠವು ತನ್ನ ಆದೇಶವನ್ನು ಕಾಯ್ದಿರಿಸಿದೆ.
ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ ನಡೆಸಿತು.
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದ್ದು, ತನಿಖೆಯನ್ನು ಯಾವ ಸ್ವರೂಪದಲ್ಲಿ ನಡೆಸಬೇಕು ಎನ್ನುವುದರ ಕುರಿತು ತನ್ನ ತೀರ್ಪನ್ನು ಕಾಯ್ದಿರಿಸಿದೆ. ಅಂತಿಮ ಆದೇಶದಲ್ಲಿ ಈ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಸ್ತೃತವಾದ ನಿರ್ದೇಶನಗಳನ್ನು ನೀಡಲಿದೆ.
ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಸಿಬಿಐ (CBI) ಕಾರ್ಯವೈಖರಿಯನ್ನು ಕಟುವಾಗಿ ತರಾಟೆಗೆ ತೆಗೆದುಕೊಂಡಿತು. “ಪ್ರಕರಣ ನಡೆದು 14 ವರ್ಷಗಳಾಗಿದ್ದರೂ ಸರಿಯಾದ ತನಿಖೆ ನಡೆದಿಲ್ಲ. ಸಿಐಡಿ ನೀಡಿದ್ದ ವರದಿಯನ್ನಷ್ಟೇ ಭಾಷಾಂತರಿಸಲಾಗಿದೆ ಹೊರತು, ತನಿಖಾಧಿಕಾರಿ ಘಟನಾ ಸ್ಥಳಕ್ಕೂ ಭೇಟಿ ನೀಡಿಲ್ಲ. ಕೆಳಹಂತದ ನ್ಯಾಯಾಲಯದಲ್ಲಿ ಇನ್ನು ಕೆಲ ಆರೋಪಿಗಳ ವಿರುದ್ಧ ತನಿಖೆ ನಡೆಸಬೇಕಿದೆ ಎಂದು ಹೇಳಿದ್ದ ಸಿಬಿಐ, ಈಗ ಸಿಬ್ಬಂದಿ ಹಾಗೂ ಹಣಕಾಸಿನ ಕೊರತೆ ಎಂದು ನೆಪ ಹೇಳುತ್ತಿರುವುದು ಸಮಂಜಸವಲ್ಲ” ಎಂದು ಕೋರ್ಟ್ ಕಿಡಿಕಾರಿತು.
ಸೌಜನ್ಯ ತಾಯಿ ಕುಸುಮಾವತಿ ಅವರು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಮನವಿ ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿರುವ ರಾಜ್ಯ ಸರ್ಕಾರ, ವಿಶೇಷ ತನಿಖಾ ತಂಡ (SIT) ರಚಿಸಿ ತನಿಖೆಗೆ ಸಂಪೂರ್ಣ ಸಹಕಾರ ನೀಡಲು ತಾವು ಸಿದ್ಧರಿರುವುದಾಗಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಬೇಕೇ ಅಥವಾ ಇತರ ಯಾವುದೇ ಸಂಸ್ಥೆಗೆ ವಹಿಸಬೇಕೇ ಎಂಬುದನ್ನು ತಾನೇ ನಿರ್ಧರಿಸುವುದಾಗಿ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಅಲ್ಲದೆ, ಆದೇಶ ಪ್ರಕಟಿಸಿದ ಬಳಿಕ ಈ ತನಿಖೆಗೆ ಸಂಬಂಧಿಸಿದಂತೆ ಮಧ್ಯಂತರ ವರದಿಯನ್ನು ಕೇಳುವುದಾಗಿ ನ್ಯಾಯಪೀಠ ಹೇಳಿದೆ.








