ಸಮಗ್ರ ನ್ಯೂಸ್: ರಾಜ್ಯದಲ್ಲಿ ಕೈಗೊಳ್ಳಲಾದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದ್ದು, ಒಟ್ಟು 1,07,96,399 ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ (ಡಿಲೀಟ್ ಮಾಡಲಾಗಿದೆ) ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ.
ಗೈರುಹಾಜರಿ, ಶಾಶ್ವತ ಸ್ಥಳಾಂತರ, ಮೃತರು ಹಾಗೂ ನಕಲಿ ಹೆಸರುಗಳು ಸೇರಿದಂತೆ ಒಟ್ಟು 1,07,96,399 ಮತದಾರರ ಹೆಸರುಗಳನ್ನು ಮೊದಲ ಕರಡು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಮತದಾರರು ತಮ್ಮ ಹೆಸರು ಮತ್ತು ವಿವರಗಳನ್ನು ಪರಿಶೀಲಿಸಲು CEO Karnataka ವೆಬ್‌ಸೈಟ್ಗೆ ಭೇಟಿ ನೀಡಬಹುದು. ತಿದ್ದುಪಡಿ ಅಥವಾ ಆಕ್ಷೇಪಣೆಗಳಿದ್ದಲ್ಲಿ ಸಕ್ಷಮ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಈ ಬಗ್ಗೆ ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದಂತ ಅನ್ಬುಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಆಗಸ್ಟ್ 17ರವರೆಗೆ ನಡೆದ 49 ದಿನಗಳ ಮನೆ-ಮನೆ ಸಮೀಕ್ಷೆಯ (SIR) ನಂತರ, ಗೈರುಹಾಜರಿ, ಸ್ಥಳ ಬದಲಾವಣೆ, ನಕಲಿ, ಮೃತ ಹಾಗೂ ಇತರ (ASDDO) ವರ್ಗಗಳಲ್ಲಿ ಗುರುತಿಸಲಾದ ಸುಮಾರು 1.08 ಕೋಟಿ ಮತದಾರರ ಹೆಸರುಗಳನ್ನು ಕರಡು ಪಟ್ಟಿಯಿಂದ ಹೊರಗಿಡಲಾಗಿದೆ.
ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳು ಅಧಿಕೃತ ಜಾಲತಾಣವಾದ https://www.ceo.karnataka.gov.in ನಲ್ಲಿ ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಿ, ವಿವರಗಳು ಸರಿಯಾಗಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಎಲ್ಲಾ ನಾಗರಿಕರಿಗೆ ಮನವಿ ಮಾಡಿದ್ದಾರೆ.
ಕರಡು ಮತದಾರರ ಪಟ್ಟಿ ಪ್ರಕಟಗೊಂಡ ಬೆನ್ನಲ್ಲೇ ಹಕ್ಕು ಮತ್ತು ಆಕ್ಷೇಪಣೆಗಳ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಲು, ಕೈಬಿಡಲಾದ ಹೆಸರುಗಳನ್ನು ಸರಿಪಡಿಸಲು ಹಾಗೂ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗುವುದನ್ನು ಖಚಿತಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.


















