ಸಮಗ್ರ ನ್ಯೂಸ್: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ ದಾರುಣ ಘಟನೆ ನಡೆದಿದೆ. ನಗರದ ಚಾವ್ಹಾಟ್ ಗಲ್ಲಿಯಲ್ಲಿ ತಡರಾತ್ರಿ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
ಕ್ಷಣಾರ್ಧದಲ್ಲಿ ಬೆಂಕಿ ಇಡೀ ಮನೆಗೆ ವ್ಯಾಪಿಸಿದ್ದು, ಮನೆಯಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರನ್ನು ಗಜಾನನ ರಾಜಾರಾಮ ದಮೋನೆ (65), ರೋಷನ ಗಜಾನನ ದಮೋನೆ (21), ಶಾರದಾ ದಮೋನೆ (45) ಹಾಗೂ ಭಾರತಿ ರಾಜಾರಾಮ ದಮೋನೆ (50) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಪ್ರಿಯಾ ಗಜಾನನ ದಮೋನೆ (28) ಮತ್ತು ಗಂಗಾ ಗಜಾನನ ದಮೋನೆ (25) ಎಂದು ತಿಳಿದುಬಂದಿದೆ.
ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಕುಟುಂಬದಲ್ಲಿ ಈ ದಾರುಣ ಘಟನೆ ನಡೆದಿದೆ. ಗಣೇಶ ಹಬ್ಬದ ಸಂಭ್ರಮದಲ್ಲಿದ್ದ ಬೆಳಗಾವಿಯಲ್ಲಿ ಈ ಘಟನೆ ಇದೀಗ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
ಘಟನೆ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.










