ಸಮಗ್ರ ನ್ಯೂಸ್: ಶ್ರೀಲಂಕಾ ಕರಾವಳಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಹಾಗೂ ಮ್ಯಾನ್ಮಾರ್ ಕರಾವಳಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮ ರಾಜ್ಯದ ಮೇಲಾಗಿದ್ದು, ಸೆಪ್ಟೆಂಬರ್ 17ರಿಂದ ಸೆಪ್ಟೆಂಬರ್ 21ರ ವರೆಗೆ ಮಳೆಯ ವ್ಯಾಪ್ತಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಮುನ್ಸೂಚನೆ ತಿಳಿಸಿದೆ.
ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದ ಬಿರುಗಾಳಿ ಜೊತೆಗೆ ಗುಡುಗು-ಮಿಂಚು ಸಹಿತ ಮಳೆ ಅಬ್ಬರಿಸುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ತುಮಕೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.
ಇನ್ನು, ವಾಯುಭಾರ ಕುಸಿತ ಮತ್ತು ಚಂಡಮಾರುತ ಪರಿಣಾಮವಾಗಿ ಇಂದು ಬೆಂಗಳೂರಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅದೇ ರೀತಿ ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜೋರಾದ ಗಾಳಿಯ ಜೊತೆಗೆ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
ಆದರೆ ಉತ್ತರ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಅದೇ ರೀತಿ ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ ಮುಂತಾದೆಡೆ ಮುಂದಿನ ಇಂದು ಬಹಿತೇಕ ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೂ ಬಿಸಿಲಿನ ತಾಪಮಾನ ಹೆಚ್ಚಿರಲಿದೆ. ಆದರೆ ಸಂಜೆ ವೇಳೆಗೆ ಸಾಧಾರಣ ಮಳೆಯಾಗಲಿದೆ ಎಂದು IMD ವರದಿ ಮಾಡಿದೆ.










