ಸಮಗ್ರ ನ್ಯೂಸ್:ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಹಾಗೂ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿಸಿಬಿ ಸಮಾಧಾನಕರ ಸುದ್ದಿ ನೀಡಿದೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ಕ್ಲೀನ್ಚಿಟ್ ದೊರೆತಿದೆ.
ಪ್ರಕರಣದ ಕುರಿತು ಕೂಲಂಕುಷವಾಗಿ ತನಿಖೆ ನಡೆಸಿ, ಪ್ರಕ್ರಿಯೆಯನ್ನು ಪೂರ್ಣಗೊಳಿಸಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿಗಳು, ಸಿದ್ದರಾಮಯ್ಯ ಅವರ ಮೇಲಿನ ಆರೋಪಗಳಲ್ಲಿ ಯಾವುದೇ ಸತ್ಯಾಸತ್ಯತೆ ಇಲ್ಲವೆಂದು ಅಧಿಕೃತವಾಗಿ ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದ ಹಾಗೂ ರಾಜಕೀಯ ವಲಯದಲ್ಲಿ ಸಲ್ಫೇಟ್ ಎಬ್ಬಿಸಿದ್ದ ವೈರಲ್ ಸ್ಟಿಂಗ್ ವಿಡಿಯೋ ಕುರಿತಂತೆ ವಿಶೇಷ ತನಿಖಾ ತಂಡ (SIT) ಭಾರಿ ಸತ್ಯಾಂಶಗಳನ್ನು ಹೊರಗೆಡಹಿದೆ.
ವಿಡಿಯೋದಲ್ಲಿ ಬಿಂಬಿಸಲಾಗಿರುವ ಲೈಂಗಿಕ ದೌರ್ಜನ್ಯದ ಆರೋಪಗಳು ಸಂಪೂರ್ಣವಾಗಿ ಕಟ್ಟುಕಥೆಯಾಗಿದ್ದು, ಪ್ರಭಾವಿ ವ್ಯಕ್ತಿಗಳ ತೇಜೋವಧೆ ಮಾಡಲು ಪೂರ್ವಯೋಜಿತವಾಗಿ ಸೃಷ್ಟಿಸಲಾದ ನಕಲಿ ನಿರೂಪಣೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಮೇಲ್ನೋಟಕ್ಕೆ ಸಾಬೀತಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಎಲ್ಲಾ ವ್ಯಕ್ತಿಗಳನ್ನು ಎಸ್ಐಟಿ ಅಧಿಕಾರಿಗಳು ಗುರುತಿಸಿದ್ದು, ಪ್ರತಿಯೊಬ್ಬರನ್ನೂ ಸುದೀರ್ಘವಾಗಿ ವಿಚಾರಣೆಗೊಳಪಡಿಸಿದ್ದಾರೆ. ಕೆಲವರನ್ನು ಒಂದಕ್ಕಿಂತ ಹೆಚ್ಚು ಬಾರಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಇವರಿಂದ ಸಂಗ್ರಹಿಸಲಾದ ಸಾಕ್ಷ್ಯಗಳು ಹಾಗೂ ದಾಖಲಿಸಲಾದ ಅಧಿಕೃತ ಹೇಳಿಕೆಗಳ ಆಧಾರದ ಮೇಲೆ, ವಿಡಿಯೋದಲ್ಲಿ ಪರೋಕ್ಷವಾಗಿ ಹಾಗೂ ನೇರವಾಗಿ ಆರೋಪಿಸಲಾದ ಪ್ರಮುಖ ವ್ಯಕ್ತಿಗಳ ಮೇಲಿನ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ತನಿಖಾ ತಂಡ ದೃಢಪಡಿಸಿದೆ.
ಈ ಪ್ರಮುಖ ಪ್ರಕರಣದಲ್ಲಿ ಗಮನಾರ್ಹ ಸಂಗತಿಯೆಂದರೆ, 2011ರಲ್ಲಿ ನಡೆದಿದೆ ಎನ್ನಲಾದ ಘಟನೆಯೊಂದಕ್ಕೆ ಸಂಬಂಧಿಸಿದಂತೆ ಸುಮಾರು 12 ವರ್ಷಗಳ ನಂತರ, ಅಂದರೆ 2023ರಲ್ಲಿ ಈ ವಿಡಿಯೋವನ್ನು ಚಿತ್ರೀಕರಿಸಲಾಗಿದೆ. ತನಿಖಾ ತಂಡವು ವಿಡಿಯೋ ಚಿತ್ರೀಕರಿಸಲು ಬಳಸಲಾದ ಮೂಲ ಮೊಬೈಲ್ ಫೋನ್ ಅನ್ನು ಪತ್ತೆಹಚ್ಚಿ ಜಪ್ತಿ ಮಾಡಿದೆ. ವಿಡಿಯೋದ ನೈಜತೆ ಹಾಗೂ ತಾಂತ್ರಿಕ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಮೊಬೈಲ್ ಅನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ. ಈ ವಿಡಿಯೋವನ್ನು ಎಡಿಟ್ ಮಾಡಲಾಗಿದೆಯೇ ಅಥವಾ ಕೃತಕವಾಗಿ ಸೃಷ್ಟಿಸಲಾಗಿದೆಯೇ ಎಂಬುದನ್ನು ಪತ್ತೆಹಚ್ಚುವುದು ತನಿಖೆಯ ಪ್ರಮುಖ ಭಾಗವಾಗಿದೆ.









