ಸಮಗ್ರ ನ್ಯೂಸ್: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನದಲ್ಲಿ ಟೇಕಾಫ್ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡ ಘಟನೆ ಬೆನ್ನಲ್ಲೇ, ಇದೀಗ ಮಂಗಳೂರು ವಿಮಾನ ನಿಲ್ದಾಣದಲ್ಲೂ ಇಂತಹದ್ದೇ ಘಟನೆ ನಡೆದಿದೆ. ಟೇಕಾಫ್ಗೆ ಕೆಲವೇ ಕ್ಷಣಗಳು ಬಾಕಿ ಇರುವಾಗ ವಿಮಾನದ ಕೆಳಭಾಗದಲ್ಲಿ ಬೆಂಕಿಯ ಕಿಡಿ ಕಾಣಿಸಿಕೊಂಡಿದ್ದು, ಪೈಲಟ್ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದೆ.
ಸೋಮವಾರ ಸಂಜೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಬೇಕಿದ್ದ ಇಂಡಿಗೋ ವಿಮಾನದಲ್ಲಿ ಈ ಘಟನೆ ಸಂಭವಿಸಿದೆ. ವಿಮಾನದಲ್ಲಿ 229 ಪ್ರಯಾಣಿಕರು ಹಾಗೂ ಏಳು ಮಂದಿ ಸಿಬ್ಬಂದಿ ಸೇರಿದಂತೆ ಒಟ್ಟು 236 ಜನರಿದ್ದರು. ಸಂಜೆ 6.10ರ ಸುಮಾರಿಗೆ ವಿಮಾನ ಟೇಕಾಫ್ಗೆ ಸಿದ್ಧವಾಗಿತ್ತು. ರನ್ವೇನಲ್ಲಿ ವೇಗವಾಗಿ ಚಲಿಸುತ್ತಿದ್ದ ವಿಮಾನ ಟೇಕಾಫ್ ಆಗಲು ಇನ್ನು ಕೇವಲ 100 ಮೀಟರ್ ಅಂತರ ಬಾಕಿ ಇರುವಾಗ ಅದರ ಕೆಳಭಾಗದಲ್ಲಿ ಬೆಂಕಿಯ ಕಿಡಿಯೊಂದಿಗೆ ಸ್ಪಾರ್ಕ್ ಕಾಣಿಸಿಕೊಂಡಿದೆ.
ಇದನ್ನು ಗಮನಿಸಿದ ಪೈಲಟ್ ಕ್ಷಣಾರ್ಧದಲ್ಲೇ ಎಚ್ಚೆತ್ತುಕೊಂಡು ವಿಮಾನದ ವೇಗವನ್ನು ನಿಯಂತ್ರಿಸಿ ರನ್ವೇನಲ್ಲೇ ನಿಲ್ಲಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನದ ಚಕ್ರವೊಂದರಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವುದೇ ಈ ಘಟನೆಗೆ ಕಾರಣ ಎನ್ನಲಾಗಿದೆ.
ಪೈಲಟ್ ಸಕಾಲದಲ್ಲಿ ನಿರ್ಧಾರ ಕೈಗೊಂಡಿದ್ದರಿಂದ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ಒಂದು ವೇಳೆ ವಿಮಾನ ಟೇಕಾಫ್ ಆಗಿದ್ದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆಯಿತ್ತು ಎಂದು ಪ್ರಯಾಣಿಕರು ಆತಂಕ ವ್ಯಕ್ತಪಡಿಸಿದ್ದಾರೆ.
ಇನ್ನು ಕೊನೆಯ ಕ್ಷಣದಲ್ಲಿ ವಿಮಾನವನ್ನು ನಿಲ್ಲಿಸುವ ಮೂಲಕ ಸಮಯಪ್ರಜ್ಞೆ ಮೆರೆದ ಪೈಲಟ್ ಕಾರ್ಯಕ್ಕೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಘಟನೆ ಬೆನ್ನಲ್ಲೇ ಮಂಗಳೂರಿನಲ್ಲೂ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವುದು ವಿಮಾನ ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.









