ಬೆಂಗಳೂರು: ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಕರಾವಳಿ ಮತ್ತು ಮಲೆನಾಡು ಸೇರಿದಂತೆ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ರಾಜ್ಯದಲ್ಲಿ ನೈರುತ್ಯ ಮುಂಗಾರು ಅಂತ್ಯವಾಗಿದ್ದರೂ ಚಂಡಮಾರುತದ ಪ್ರಭಾವದಿಂದಾಗಿ ಹಲವಡೆ ನಿರಂತರವಾಗಿ ಮಳೆ ಸುರಿಯುತ್ತಿದೆ.
ಇಂದಿನಿಂದ ಮುಂಗಾರು ಮಳೆಯ ಪ್ರಭಾವ ಕ್ಷೀಣಿಸಲು ಪ್ರಾರಂಭವಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಇಂದು ಕರ್ನಾಟಕದ ಕರಾವಳಿ ಭಾಗ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವ ಹೆಚ್ಚಾಗಿದ್ದು, ತಮಿಳುನಾಡಿನ ಕರಾವಳಿ ಭಾಗದಲ್ಲಿಯೂ ಇಂದು ಭಾರೀ ಮಳೆಯಾಗಲಿದೆ.
ಈ ಜಿಲ್ಲೆಗಳಲ್ಲಿ ಇಂದು ಯೆಲ್ಲೋ & ಆರೆಂಜ್ ಅಲರ್ಟ್ ಘೋಷಣೆ
ರಾಜ್ಯದಲ್ಲಿ ನೈಋತ್ಯ ಮುಂಗಾರು ಅಂತ್ಯವಾಗಿದೆ. ಆದರೆ ಚಂಡಮಾರುತದ ಪ್ರಭಾವ ಇದ್ದು ಆ ಕಾರಣದಿಂದ ಇಂದೂ ಸಹ ಮಳೆ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಇಂದು ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಂತೆಯೇ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೊಡಗಿನಲ್ಲಿ ಇಂದು ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ
ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.